ತುಮಕೂರು: ಡಾ.ಜಿ.ಪರಮೇಶ್ವರ್ ಮುಖ್ಯಮಂತ್ರಿಯಾಗಬೇಕು, ಈ ವಿಚಾರವನ್ನು ಕಾಂಗ್ರೆಸ್ ಹೈಕಮಾಂಡ್ ಗಂಭೀರವಾಗಿ ಪರಿಗಣಿಸಬೇಕೆಂದು ಆಗ್ರಹಿಸಿ ನಗರದಲ್ಲಿ ಇಂದು ವಿವಿಧ ದಲಿತಪರ ಸಂಘಟನೆಗಳು ರಸ್ತೆ ತಡೆ ನಡೆಸಿ ಧರಣಿ ನಡೆಸಿದವು.

ಟೌನ್ ವೃತ್ತದಲ್ಲಿ ಜಮಾಯಿಸಿದ ದಲಿತ ಪರ ಸಂಘಟನೆಗಳು ಹಾಗೂ ಡಾ.ಜಿ.ಪರಮೇಶ್ವರ್ ಅವರ ಬೆಂಬಲಿಗರು ಅವರ ಭಾವಚಿತ್ರವನ್ನು ಹಿಡಿದು ಮುಖ್ಯಮಂತ್ರಿ ಆಗಲೇಬೇಕು ಎಂದು ಆಗ್ರಹಿಸಿದರು.

ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ತುಮಕೂರು ನಗರದ ಟೌನ್ ಹಾಲ್ ವೃತ್ತದಲ್ಲಿ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು, ಕಾಂಗ್ರೆಸ್ ಹೈಕಮಾಂಡ್ ಪರಮೇಶ್ವರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ಕಲ್ಪಿಸದಿದ್ದಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನಾಕಾರರಲ್ಲಿ ಕೆಲವರು ಅರೆಬೆತ್ತಲೆ ಮೆರವಣಿಗೆಯನ್ನೂ ಕೂಡ ನಡೆಸಿ ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಮುಂಜಾಗ್ರತಾ ಕ್ರಮವಾಗಿ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು. ಅಲ್ಲದೇ, ವಾಹನಗಳನ್ನು ಪರ್ಯಾಯ ಮಾರ್ಗದಲ್ಲಿ ಸಾಗಲು ಅನುವು ಮಾಡಿಕೊಡಲಾಗಿತ್ತು.

ಇದೇ ರೀತಿ ಡಿ.ಕೆ.ಶಿವಕುಮಾರ್ ಅವರನ್ನು ಮುಖ್ಯಮಂತ್ರಿಯಾಗಿ ಕಾಣಬೇಕೆಂದು ಡಿಕೆಶಿ ಅಭಿಮಾನಿ ಬಳಗದ ವತಿಯಿಂದ ಇಂದು ಚಾಮುಂಡಿ ಬೆಟ್ಟದಲ್ಲಿ ಬೆಳ್ಳಿರಥ ಎಳೆದು ವಿಶೇಷ ಸೇವೆ ಸಲ್ಲಿಸಲಾಯಿತು. ಅಭಿಮಾನಿಗಳು ಡಿ.ಕೆ.ಶಿವಕುಮಾರ್ ಅವರ ಭಾವಚಿತ್ರವನ್ನು ರಥದ ಮುಂಭಾಗದಲ್ಲಿಟ್ಟು, ಚಾಮುಂಡೇಶ್ವರಿ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಇದನ್ನೂ ಓದಿ: ಡಿಕೆಶಿ ಸಿಎಂ ಆಗಲೆಂದು ಚಾಮುಂಡಿ ಬೆಟ್ಟದಲ್ಲಿ ಬೆಳ್ಳಿರಥ ಎಳೆದು ವಿಶೇಷ ಸೇವೆ; ಅಧಿಕಾರ ಹಂಚಿಕೆ ಆಗಲೇಬೇಕೆಂದ ಹೆಚ್.ವಿಶ್ವನಾಥ್